
ಉಡುಪಿ : ಪ್ರಸಿದ್ಧ ನಟಿ ರಕ್ಷಿತಾ ಪ್ರೇಮ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಕಾಪುವಿಗೆ ಆಗಮಿಸಿದ ಅವರು, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಘಂಟಾನಾದ ಸೇವೆ ಸಲ್ಲಿಸಿದ ನಟಿ
ದೇವಸ್ಥಾನಕ್ಕೆ ಭೇಟಿ ನೀಡಿದ ರಕ್ಷಿತಾ, ಅನ್ನದಾನ ಸೇವೆ ಸಲ್ಲಿಸಿದರು. ನಂತರ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ನೆರವೇರಿಸುವ ಘಂಟಾನಾದ ಸೇವೆಯನ್ನು ಮಾಡಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ದೇವಸ್ಥಾನದ ಸಮಿತಿ ಸದಸ್ಯರ ಸಮ್ಮುಖದಲ್ಲಿ ರಕ್ಷಿತಾ ಅವರನ್ನು ಗೌರವಿಸಿ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತಾ, “ಕಳೆದ ವಾರವಷ್ಟೇ ನನ್ನ ತಾಯಿ ಇಲ್ಲಿಗೆ ಬಂದು ಹರಕೆ ಹೊತ್ತಿದ್ದರು. ನಾನು ಕೂಡ ಬರಬೇಕೆಂದು ಅಂದುಕೊಂಡಿದ್ದೆ. ಆದರೆ, ಅಮ್ಮ ನನ್ನನ್ನು ಇಷ್ಟು ಬೇಗ ಕರೆಸಿಕೊಳ್ಳುತ್ತಾಳೆ ಎಂದು ಅಂದುಕೊಂಡಿರಲಿಲ್ಲ. ದೇವಸ್ಥಾನ ಬಹಳ ಸುಂದರವಾಗಿ ಮೂಡಿಬಂದಿದೆ” ಎಂದು ಸಂತಸ ವ್ಯಕ್ತಪಡಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.