
ಜನವರಿ 11 ರಂದು ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ನಡೆಯಲಿರುವ ಸಂವಿಧಾನ ಸನ್ಮಾನ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಬಿಜೆಪಿ ಕಾರ್ಕಳ ಮಂಡಲದ ನೇತೃತ್ವದಲ್ಲಿ ಕಾರ್ಕಳದ ವಿಕಾಸ ಸೇವಾ ಕಛೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ವಹಿಸಿದ್ದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮದ ವಿವರ ನೀಡಿದರು. ಸಂವಿಧಾನದ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರತ್ನಾಕರ ಹೆಗ್ಡೆ ಮಾತನಾಡಿ, ಸಂವಿಧಾನದ ಮಹತ್ವ ತಿಳಿಯದೇ ಪಕ್ಷವನ್ನು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಸಭೆಯಲ್ಲಿ ಮಾತನಾಡಿದ ನವೀನ್ ನಾಯಕ್, ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಜ.11ರಂದು ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಕಚ್ಚೂರು ಶ್ರೀಮಾಲ್ದಿದೇವಿ ದೇವಸ್ಥಾನದ ಆಡಳಿತ ಮುಖ್ಯಸ್ಥ ಕುಲದಾಸ್, ಡಾ.ಪ್ರಪ್ಪುಲ್ಲ ಮಾಲ್ಯಾಡಿ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ್ ಶೆಟ್ಟಿ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಜಯರಾಮ ಸಾಲಿಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರವೀಂದ್ರ ಕುಮಾರ್ ಸ್ವಾಗತಿಸಿ, ಸತೀಶ್ ಪೂಜಾರಿ ಬೋಳ ನಿರೂಪಿಸಿ ಧನ್ಯವಾದಗೈದರು.