
ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ್ ವರ್ಮ ಅವರ ನಿವಾಸದಲ್ಲಿ ಬಹು ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್‌ನ 30 ಮಂದಿ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್‌ನ ಅಧಿಕೃತ ಜಾಲತಾಣದಲ್ಲಿ ಬಹಿರಂಗಪಡಿಸಲು ನಿರ್ಧರಿಸಿದ್ದಾರೆ.
ಈ ನಿರ್ಧಾರವು, ಗುರುವಾರ ನಡೆದ ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯ ಸಭೆಯಲ್ಲಿ (Full Court Meeting) ಮುಖ್ಯ ನ್ಯಾಯಮೂರ್ತಿ (CJI) ಸಂಜೀವ್ ಖನ್ನಾ ಅವರ ಅಧ್ಯಕ್ಷತೆಯಲ್ಲಿ ಕೈಗೊಳ್ಳಲ್ಪಟ್ಟಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಉದ್ದೇಶ ಇದರ ಹಿಂದೆ ಇದೆ ಎಂದು ವರದಿಯಾಗಿದೆ.
ಈಗಾಗಲೇ ಎಲ್ಲಾ ಸುಪ್ರೀಂ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದರೂ, ಆ ಮಾಹಿತಿ ಸಾರ್ವಜನಿಕವಾಗಿ ಲಭ್ಯವಿಲ್ಲ. ಆದರೆ, ನ್ಯಾಯಮೂರ್ತಿಗಳ ಇಚ್ಛಾ ಶಕ್ತಿಯಿಂದಲೇ ಇದೀಗ ಆಸ್ತಿಯ ಮಾಹಿತಿಯನ್ನು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಬಹಿರಂಗಪಡಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.
ಸುಪ್ರೀಂ ಕೋರ್ಟ್ ಜಾಲತಾಣದ ಪ್ರಕಾರ, ಈ ಕ್ರಮ ನ್ಯಾಯಮೂರ್ತಿಗಳ ಸ್ವಯಂ ಪ್ರೇರಿತ ನಿರ್ಧಾರವಾಗಿದ್ದು, ಯಾವುದೇ ಕಾನೂನುಬದ್ಧ ಬಾಧ್ಯತೆಯ ಭಾಗವಾಗಿಲ್ಲ.