
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದ ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳು ಕಾರ್ಯಾಚರಣೆಗಿಳಿದು ಪ್ರಮುಖ ಯಶಸ್ಸು ಸಾಧಿಸಿವೆ. ನಿರಂತರವಾಗಿ ನಡೆಯುತ್ತಿದ್ದ ಈ ಅಪರಾಧ ಕೃತ್ಯಗಳ ಮೂಲವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.
ಪೊಲೀಸರ ತೀವ್ರ ಕಾರ್ಯಾಚರಣೆಯ ಪರಿಣಾಮವಾಗಿ, ಅಕ್ರಮ ಗೋ ಸಾಗಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಕೃತ್ಯಕ್ಕೆ ಬಳಸಲಾಗಿದ್ದ ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಸಾಸ್ತಾನ ನಿವಾಸಿ ಮೊಹಮ್ಮದ್ ಕೈಫ್ ಮತ್ತು ಉಚ್ಚಿಲ ನಿವಾಸಿ ಮೊಹಮ್ಮದ್ ಸುಹೇಲ್ ಖಾದರ್ ಎಂದು ಗುರುತಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಸಾಗಿಸಲಾಗುತ್ತಿದ್ದ 4 ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಅವುಗಳನ್ನು ಸುರಕ್ಷಿತವಾಗಿ ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಕಾರುಗಳು ಜಾನುವಾರು ಕಳ್ಳತನ ಮತ್ತು ಸಾಗಾಟಕ್ಕೆ ನೇರವಾಗಿ ಬಳಕೆಯಾಗಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಪ್ರಕರಣದ ಮೂಲಕ ಬೈಂದೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಜಾನುವಾರು ಕಳ್ಳತನ ಜಾಲಕ್ಕೆ ಬ್ರೇಕ್ ಬಿದ್ದಂತಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಆಶ್ವಾಸನೆ ನೀಡಲಾಗಿದೆ.