
ಕೋಟ: ಭಾಗವತ ಸಂಪ್ರದಾಯದ ಪ್ರಮುಖ ಮಠಗಳಲ್ಲಿ ಒಂದಾದ ಬಾಳೆಕುದ್ರು ಮಠದ ಹಿರಿಯ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಅವರು (55) ಶುಕ್ರವಾರ, ಜುಲೈ 4 ರಂದು ನಿಧನರಾದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು, ಕಳೆದ ಕೆಲವು ತಿಂಗಳ ಹಿಂದೆ ಶಿಷ್ಯ ಸ್ವೀಕಾರ ಮಾಡಿ ಮಠದಲ್ಲೇ ವಿಶ್ರಾಂತಿಯಲ್ಲಿದ್ದರು. ನಿಯಮಿತವಾಗಿ ಡಯಾಲಿಸೀಸ್ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ತೆರಳುವ ವೇಳೆ ಆರೋಗ್ಯದಲ್ಲಿ ಹಠಾತ್ ಏರುಪೇರಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಶ್ರೀಗಳ ನಿಧನಕ್ಕೆ ಭಕ್ತ ಸಮೂಹ ತೀವ್ರ ಸಂತಾಪ ವ್ಯಕ್ತಪಡಿಸಿದೆ.