
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಪ್ರದೇಶದಲ್ಲಿ ನಡೆದ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯ ಆರೋಪಿ ಭರತ್ ಕುಮ್ಡೇಲು ಸೇರಿದಂತೆ ಇತರ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (KCOCA – ಕೊಕಾ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಮಾಹಿತಿ ನೀಡಿದ್ದಾರೆ.
ಕಳೆದ ಮೇ 27 ರಂದು ಈ ಕೊಲೆ ಘಟನೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಈಗಾಗಲೇ ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ. ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಚಿನ್ ರೊಟ್ಟಿಗುಡ್ಡೆ ಮತ್ತು ರಂಜಿತ್ ಸೇರಿದಂತೆ 13 ಜನರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದಾಗ್ಯೂ, ಪುದು ಗ್ರಾಮದ ನಿವಾಸಿ ಮತ್ತು ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ 29 ವರ್ಷದ ಭರತ್ ರಾಜ್ ಅಲಿಯಾಸ್ ಭರತ್ ಕುಮ್ಡೇಲು ಎಂಬಾತ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ವಿವಿಧ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕೊಲೆ ಮತ್ತು ಕೊಲೆಯತ್ನದಂತಹ ಗಂಭೀರ ಅಪರಾಧ ಕೃತ್ಯಗಳು, ಸಮಾಜದಲ್ಲಿ ಪ್ರಚೋದನೆ ಉಂಟುಮಾಡುವಂತಹ ಭಾಷಣಗಳು ಹಾಗೂ ಇತರ ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗುವ ಮೂಲಕ ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿರುವ ಈ ಸಂಘಟಿತ ಗುಂಪಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೊಕಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸ್ಪಷ್ಟಪಡಿಸಿದ್ದಾರೆ. ಈ ಕ್ರಮವು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.




































