
ಬೆಳಗಾವಿ: ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕಾಗವಾಡ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ ಕಾಗವಾಡ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಎಸ್ಪಿ ಭೀಮಶಂಕರ ಗುಳೇದ ಅವರು ನೀಡಿದ ಮಾಹಿತಿ ಪ್ರಕಾರ, ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನು, ಲಾರಿಗೆ ಬೆಂಕಿ ಹಚ್ಚಿದ ಮತ್ತು ದರೋಡೆ, ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕಾಗವಾಡ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಆಂಧ್ರಪ್ರದೇಶದ ಹೈದರಾಬಾದ್‌ಗೆ ಅಕ್ರಮವಾಗಿ ಗೋಮಾಂಸ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ವೇಳೆ ಸಾರ್ವಜನಿಕರು ಲಾರಿಯನ್ನು ತಡೆದು ಬೆಂಕಿ ಹಚ್ಚಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ತನಿಖೆ ತೀವ್ರಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.



































