
ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳ (SIT) ಇಂದು ತನಿಖೆಯನ್ನು ಅಧಿಕೃತವಾಗಿ ಆರಂಭಿಸಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಈ ಪ್ರಕರಣದ ದಾಖಲೆಗಳನ್ನು ಎಸ್‌ಐಟಿ ತಂಡಕ್ಕೆ ಹಸ್ತಾಂತರಿಸಲಾಗುತ್ತದೆ.
ಎಸ್‌ಐಟಿ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ನೇತೃತ್ವದ ತಂಡ ಇಂದು ಬೆಳ್ತಂಗಡಿಗೆ ಭೇಟಿ ನೀಡಲಿದೆ. ಪ್ರಕರಣದ ವಿಚಾರಣೆಗಾಗಿ ಕೋರ್ಟ್‌ಗೆ ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ. ಈ ಪ್ರಕರಣದಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ತಾವು ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಕೋರ್ಟ್‌ಗೆ ಹೇಳಿಕೆ ನೀಡಿದ್ದರು. ಇದೀಗ ಎಸ್‌ಐಟಿ ಈ ಅನಾಮಿಕ ವ್ಯಕ್ತಿಯನ್ನು ಕೋರ್ಟ್ ಮೂಲಕ ತಮ್ಮ ವಶಕ್ಕೆ ಪಡೆದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲು ಸಿದ್ಧತೆ ನಡೆಸಿದೆ. ಈ ತನಿಖೆಯಿಂದ ಪ್ರಕರಣದ ಸತ್ಯಾಂಶ ಹೊರಬರಲಿದೆ ಎಂದು ನಿರೀಕ್ಷಿಸಲಾಗಿದೆ.