
ಬೆಂಗಳೂರು : ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಿರುವ ಪೊಲೀಸರು, ಬರೋಬ್ಬರಿ 5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಆಫ್ರಿಕಾ ಮೂಲದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿ ವೀಸಾದಲ್ಲಿ ಬಂದಿದ್ದ ಆರೋಪಿಗಳು
ಬಂಧಿತರನ್ನು ಜೊಯಲ್ ಕಾಬೊಂಗ್ ಮತ್ತು ಜೊಯ್ ಸಂಡೇ ಎಂದು ಗುರುತಿಸಲಾಗಿದೆ. ಜೊಯಲ್ ಕಾಬೊಂಗ್ ಸುಮಾರು 12 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ. ಅದೇ ರೀತಿ, ಜೊಯ್ ಸಂಡೇ ಮೂರು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು. ಇಬ್ಬರೂ ತಮ್ಮ ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ನೆಲೆಸಿ, ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದರು.
ಆಗಸ್ಟ್ 15ರ ಸಂಜೆ ಬೆಟ್ಟದಾಮಸಪುರದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತರಿಂದ ಒಟ್ಟು 2.150 ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ. ಇವರಿಬ್ಬರು ಮತ್ತೊಬ್ಬರಿಂದ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.