
ಬೆಂಗಳೂರು: “ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಕುರಿತಾದ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ” ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಕೇಳಿದಾಗ ಈ ರೀತಿಯಾಗಿ ಉತ್ತರಿಸಿದರು. ಈ ಮೂಲಕ ಸಿಎಂ ಹೇಳಿಕೆಗೆ ಯಾವುದೇ ತಕರಾರಿಲ್ಲ ಎಂದು ಪರೋಕ್ಷವಾಗಿ ಸೂಚಿಸಿದರು.
ದಿಲ್ಲಿ ಭೇಟಿ ಬಗ್ಗೆ ಸ್ಪಷ್ಟನೆ
ಇತ್ತೀಚಿನ ದೆಹಲಿ ಭೇಟಿ ಕುರಿತು ಕೇಳಿದಾಗ, ತಾವು ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
“ನಾನು ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆ ಅಂಬಿಕಾ ಸೋನಿ ಅವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಹೋಗಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಾ ಗಾಂಧಿ ಅವರೊಂದಿಗೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ ಇದೆ. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ,” ಎಂದು ತಿಳಿಸಿದರು.
ತಾವು ಹೈಕಮಾಂಡ್ ಭೇಟಿಗೆ ದಿಲ್ಲಿಗೆ ಹೋಗಿದ್ದಿರಿ ಎಂಬ ಮಾಧ್ಯಮಗಳ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, “ನಾನು ದಿಲ್ಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ನೀವು ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ನನಗದು ಸಂಬಂಧ ಪಡದ ವಿಷಯ” ಎಂದು ಸ್ಪಷ್ಟವಾಗಿ ನಿರಾಕರಿಸಿದರು.



































