
ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಮತ್ತು ಪ್ರತಿಮೆಯ ಕುರಿತು ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಪ್ರಚಾರಕ್ಕೆ ಅಂತ್ಯ ಹಾಡಲಾಗಿದೆ ಎಂದು ಕಾರ್ಕಳ ಶಾಸಕ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಪ್ರತಿಮೆ ‘ಫೈಬರ್’ನದ್ದು ಎಂದು ನಡೆಸುತ್ತಿದ್ದ ವ್ಯವಸ್ಥಿತ ‘ಟೂಲ್ ಕಿಟ್’ ಅಪಪ್ರಚಾರ ಸುಳ್ಳು ಎಂಬುದು ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಭಾಗವನ್ನು ಮರು ವಿನ್ಯಾಸಗೊಳಿಸುವ ಉದ್ದೇಶದಿಂದ ತೆಗೆಯಲಾಗಿತ್ತು ಎಂಬುದನ್ನೂ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಯಿಂದ ‘ಪ್ರತಿಮೆ ಫೈಬರ್‌ನದ್ದು’ ಎಂಬ ಪಿತೂರಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.
“ಇನ್ನಾದರೂ ರಾಜ್ಯ ಸರ್ಕಾರ ಪರಶುರಾಮ ಥೀಮ್ ಪಾರ್ಕ್‌ಗೆ ನಿಗದಿಪಡಿಸಿದ್ದ ಅನುದಾನವನ್ನು ಬಿಡುಗಡೆ ಮಾಡಬೇಕು. ಇದರ ಜೊತೆಗೆ, ಈ ತಾಣವನ್ನು ಪ್ರವಾಸೋದ್ಯಮಕ್ಕೆ ಮತ್ತೆ ತೆರೆಯಬೇಕು ಎಂದು ಒತ್ತಾಯಿಸುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ನಡೆಸುವ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.