
ಬೆಂಗಳೂರು : ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ ಅಪರಾಧ ಪ್ರಕರಣಗಳ ಸಮರ್ಪಕ ತನಿಖೆ ಮತ್ತು ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ, ಎಐಡಿಎಸ್‌ಒ (All India Democratic Students’ Organisation) ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಧರಣಿ ಹಮ್ಮಿಕೊಂಡಿತ್ತು. ಈ ಘಟನೆಗಳು ಇಡೀ ದೇಶವನ್ನು ಬೆಚ್ಚಿ ಬೀಳಿಸಿವೆ ಎಂದು ಎಐಡಿಎಸ್‌ಒ ಮುಖಂಡರು ಹೇಳಿದ್ದಾರೆ.
ಸುಭಾಷ್ ಬೆಟ್ಟದಕೊಪ್ಪ ಅವರ ಮಾತು: ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಅವರು ಮಾತನಾಡಿ, ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ರಾಜಕೀಯ ಪಕ್ಷಗಳು ಮೌನ ವಹಿಸಿರುವುದನ್ನು ತೀವ್ರವಾಗಿ ಖಂಡಿಸಿದರು. ಪ್ರಕರಣಗಳ ಕುರಿತು ಎದ್ದಿರುವ ಎಲ್ಲ ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದ್ದು, ಎಸ್‌ಐಟಿ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಲ್ಯಾಣ ಕುಮಾರ್ ಅವರು ಧರಣಿಯ ಅಧ್ಯಕ್ಷತೆ ವಹಿಸಿದ್ದರು.ರಾಜ್ಯಾಧ್ಯಕ್ಷ ಅಶ್ವಿನಿ ಕೆ.ಎಸ್., ಕಾರ್ಯದರ್ಶಿ ಅಜಯ್ ಕಾಮತ್ ಸೇರಿದಂತೆ ಇತರ ಮುಖಂಡರು, ರಾಜ್ಯ ಸಮಿತಿಯ ಸದಸ್ಯರು ಮತ್ತು ನೂರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.