
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎಂದು ಹೇಳಿಕೆ ನೀಡಿದ್ದ ಅನಾಮಿಕ ವ್ಯಕ್ತಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಬಂಧಿಸಿದೆ. ಈ ವ್ಯಕ್ತಿಯನ್ನು ಸಾಮಾನ್ಯವಾಗಿ ‘ಮಾಸ್ಕ್ ಮ್ಯಾನ್’ ಎಂದೇ ಕರೆಯಲಾಗುತ್ತಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಹಾಗೂ ಹಿಂದೆ ಅನಾಥ ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ್ದ ಅಧಿಕಾರಿಗಳನ್ನು ಕೂಡ ಎಸ್‌ಐಟಿ ವಿಚಾರಣೆಗೆ ಒಳಪಡಿಸಿತ್ತು. ಮಾಸ್ಕ್ ಮ್ಯಾನ್ ಹೇಳಿಕೆ ಆಧರಿಸಿ ಆತ ತೋರಿಸಿದ್ದ 17 ಸ್ಥಳಗಳಲ್ಲೂ ಎಸ್‌ಐಟಿ ಪರಿಶೀಲನೆ ನಡೆಸಿದರೂ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿರಲಿಲ್ಲ.
ಮಾಹಿತಿ ಸರಿಯಿಲ್ಲದ ಕಾರಣ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಶನಿವಾರ ಮುಂಜಾನೆ 5 ಗಂಟೆಯವರೆಗೆ ಅನಾಮಿಕನ ತೀವ್ರ ವಿಚಾರಣೆ ನಡೆಸಲಾಯಿತು. ಇದರ ಬೆನ್ನಲ್ಲೇ ಆತನನ್ನು ಬಂಧಿಸಲಾಗಿದ್ದು, ಕೆಲವೇ ಹೊತ್ತಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.