
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಪೊಲೀಸ್ ಠಾಣೆಯ ಮುಂದೆ ಗುಂಪು ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.
ಆಗಸ್ಟ್ 6ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಯೂಟ್ಯೂಬರ್‌ಗಳ ತಂಡದ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆ ನಡೆದ ನಂತರ, ಧರ್ಮಸ್ಥಳ ಪೊಲೀಸ್ ಠಾಣೆಯ ಮುಂದೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿ ಅಹಿತಕರ ವಾತಾವರಣ ಸೃಷ್ಟಿಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆಗಸ್ಟ್ 9ರಂದು ಧರ್ಮಸ್ಥಳದ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಮತ್ತು ಚೇತನ್ ಅವರನ್ನು ಬಂಧಿಸಿದರು. ಬಂಧಿತರನ್ನು ಶನಿವಾರ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ವಿಚಾರಣೆ ನಂತರ, ನ್ಯಾಯಾಧೀಶರು 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಆಗಸ್ಟ್ 11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದಾರೆ.
ಘಟನೆ ಕುರಿತು ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್. ಗಾಣಿಗೇರ್ ನೀಡಿದ ದೂರಿನನ್ವಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (BNS), 2023ರ ಅಡಿಯಲ್ಲಿ (U/s-189(2),191(2),132,324(6),190) 27 ಮಂದಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಗುಂಪುಗಳು ಕಾನೂನುಬಾಹಿರವಾಗಿ ಸೇರಿ ಗಲಾಟೆ ನಡೆಸಿದ್ದವು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.