
ಧಾರವಾಡ : ಕ್ಷುಲ್ಲಕ ಕಾರಣಕ್ಕಾಗಿ ಆರಂಭವಾದ ಜಗಳವೊಂದು ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬನ ಭೀಕರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ.
ಮೃತಪಟ್ಟ ವಿದ್ಯಾರ್ಥಿಯನ್ನು ಕುಂದಗೋಳದ ನಿಂಗರಾಜ್ ಅವರಿ (16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಅನುದಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ. ಬುಧವಾರ ಸಂಜೆ ನಿಂಗರಾಜ್ ಹಾಗೂ ಇನ್ನೊಂದು ಗುಂಪಿನ ನಡುವೆ ಸಣ್ಣ ವಿಷಯಕ್ಕೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಆವೇಶಕ್ಕೊಳಗಾದ ಮೂವರು ಅಪ್ರಾಪ್ತ ಬಾಲಕರು ಚಾಕುವಿನಿಂದ ನಿಂಗರಾಜನಿಗೆ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕುಂದಗೋಳ ಪೊಲೀಸರು ಕಾರ್ಯಾಚರಣೆ ನಡೆಸಿ, ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಕಿಶೋರರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದಾಗಿ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಬೆಚ್ಚಿಬಿದ್ದಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.




































