
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.
ಈ ಮಹತ್ವದ ನೇಮಕಾತಿಯು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿಗಳಾಗಿರುವ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಮಾರ್ಗದರ್ಶನದಲ್ಲಿ ನಡೆದಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಶಿಫಾರಸು ಪತ್ರದ ಆಧಾರದ ಮೇಲೆ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಲಾ ಲಂಬಾ ಅವರು ಈ ಆದೇಶ ಹೊರಡಿಸಿದ್ದಾರೆ.
ನೆಲ್ಯಾಡಿ ಸಮೀಪದ ಕುಂಡಡ್ಕದ ನಿವಾಸಿಯಾಗಿರುವ ಉಷಾ ಅಂಚನ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷ ಸಂಘಟನೆಯಲ್ಲಿ ಅವರ ಪಾತ್ರ ಮಹತ್ವದ್ದಾಗಿದ್ದು, ಜೊತೆಗೆ ಸಹಕಾರಿ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ತಮ್ಮನ್ನು ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ವಿವಿಧ ಹುದ್ದೆಗಳ ಮೂಲಕ ಸಮಾಜ ಸೇವೆ ಸಲ್ಲಿಸುತ್ತಾ ಬಂದಿರುವ ಅಂಚನ್ ಅವರ ಅನುಭವ ಮತ್ತು ಬದ್ಧತೆಯನ್ನು ಪರಿಗಣಿಸಿ ಈ ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಈ ನೇಮಕವು ಜಿಲ್ಲೆಯಲ್ಲಿ ಮಹಿಳಾ ಕಾಂಗ್ರೆಸ್ ಚಟುವಟಿಕೆಗಳಿಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ.