
ಉಡುಪಿ: ಮಣಿಪಾಲದಲ್ಲಿ ಪೊಲೀಸರು ಅನಿರೀಕ್ಷಿತ ಕಾರ್ಯಾಚರಣೆ ನಡೆಸಿ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.
ಮಣಿಪಾಲ ಠಾಣಾ ವ್ಯಾಪ್ತಿಯ ಐದು ಪ್ರಮುಖ ಸ್ಥಳಗಳಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ಈ ಕಾರ್ಯಾಚರಣೆಯಲ್ಲಿ 18 ಕಾರುಗಳು ಮತ್ತು 3 ಬೈಕ್‌ಗಳು ಸೇರಿದಂತೆ ಒಟ್ಟು 21 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಖ್ಯವಾಗಿ, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಮದ್ಯ ಸೇವಿಸಿ ವಾಹನ ಚಲಾಯಿಸುವ ಪ್ರತಿ ಪ್ರಕರಣಕ್ಕೂ ನ್ಯಾಯಾಲಯದಲ್ಲಿ ಕನಿಷ್ಠ ರೂ. 10,000 ದಂಡ ವಿಧಿಸಲಾಗುತ್ತದೆ.
ಇದರ ಜೊತೆಗೆ, ಅಜಾಗರೂಕತೆಯಿಂದ ವಾಹನ ಚಲಾಯಿಸಿದ, ಪೊಲೀಸ್ ಸೂಚನೆಗಳನ್ನು ಉಲ್ಲಂಘಿಸಿದ ಮತ್ತು ಮೂವರನ್ನು ಸಾಗಿಸಿದ ಪ್ರಕರಣಗಳಲ್ಲಿ 10 ವಾಹನಗಳಿಗೆ ತಲಾ ರೂ. 10,000 ಸ್ಥಳ ದಂಡ ವಿಧಿಸಲಾಯಿತು. ಈ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಉಡುಪಿ ಪೊಲೀಸ್ ಅಧೀಕ್ಷಕರ ನಿರ್ದೇಶನದ ಮೇರೆಗೆ, ಉಡುಪಿ ಡಿವೈಎಸ್‌ಪಿ ಮತ್ತು ಮಣಿಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಉಡುಪಿ ನಗರ, ಉಡುಪಿ ಸಂಚಾರ, ಮಲ್ಪೆ ಮತ್ತು ಮಣಿಪಾಲ ಪೊಲೀಸ್ ಠಾಣೆಗಳ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮದ್ಯಪಾನ ಮಾಡಿ ವಾಹನ ಚಲಾಯಿಸುವವರ, ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸುವವರ ವಿರುದ್ಧ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಮನವಿ ಮಾಡಲಾಗಿದೆ.