
ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 43 ವರ್ಷದ ಚಂದ್ರಶೇಖರ ಎಂಬಾತನು ಚಾಕೊಲೇಟ್ ಆಸೆ ತೋರಿಸಿ ಬಾಲಕಿಯನ್ನ ತನ್ನ ಮನೆಗೆ ಕರೆದುಕೊಂಡು ಹೋಗಿ ಈ ಅಮಾನವೀಯ ಕೃತ್ಯವೆಸಗಿದ್ದಾನೆ.
ಚಂದ್ರಶೇಖರ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ಶಾಲೆಯ ಮಧ್ಯಾಹ್ನ ಊಟದ ವಿರಾಮದ ಸಮಯದಲ್ಲಿ ಬಾಲಕಿ ಅಂಗಡಿಗೆ ಹೋದಾಗ, ಚಾಕೊಲೇಟ್ ಕೊಟ್ಟು ಆಕೆಯನ್ನು ಮನೆಗೆ ಕರೆದೊಯ್ದಿದ್ದಾನೆ. ನಂತರ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆ ನೆರೆಹೊರೆಯವರ ಗಮನಕ್ಕೆ ಬಂದಿದ್ದು, ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯ ಬಾಗಿಲು ಮುರಿದು ಒಳನುಗ್ಗಿ ಆರೋಪಿ ಚಂದ್ರಶೇಖರನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೋಕ್ಸೋ ಪ್ರಕರಣ ದಾಖಲು
ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದ್ದು, ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ನೀಡಲು ಕ್ರಮ ಕೈಗೊಳ್ಳಲಾಗಿದೆ.