
ಹುಬ್ಬಳ್ಳಿ : ಐದು ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಲು ಯತ್ನಿಸಿದಾಗ ಆತ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದ ಪರಿಣಾಮ, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ತಾರಿಹಾಳದ ಕೆಳಸೇತುವೆ ಬಳಿ ನಡೆದಿದೆ.
ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತನು ವಿಜಯನಗರದಲ್ಲಿ ವಾಸವಾಗಿದ್ದ ಬಾಲಕಿಯನ್ನು ತಿಂಡಿ ತಿನಿಸು ನೀಡುವುದಾಗಿ ಹೇಳಿ ಶೆಡ್‌ವೊಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿ ಕೊನೆಗೆ ಬಾಲಕಿಯನ್ನು ಹತ್ಯೆಗೈದಿದ್ದಾನೆ. ಸ್ಥಳೀಯರು ಶವ ಪತ್ತೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗೆ ಸುತ್ತುವರಿದ ಪೊಲೀಸರು, ಆತನನ್ನು ವಶಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲೇ ಆತ ಹಲ್ಲೆಗೆ ಮುಂದಾದ ಕಾರಣ, ಪೊಲೀಸರು ಗುಂಡು ಹಾರಿಸಿದ್ದಾರೆ.
ಗುಂಡುಗಳು ಆರೋಪಿಯ ಎದೆ ಮತ್ತು ಕಾಲಿಗೆ ತಗುಲಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಅಶೋಕ್ ನಗರದ ಪೊಲೀಸ್ ಠಾಣೆ ಮುಂದೆ ನೂರಾರು ಜನರು ಪ್ರತಿಭಟನೆ ನಡೆಸಿದ್ದರು. ಪೊಲೀಸರ ಕಾರ್ಯಚಟುವಟಿಕೆಗೆ ಸಾರ್ವಜನಿಕರಿಂದ ಹರ್ಷೋದ್ಗಾರ ವ್ಯಕ್ತವಾಗಿದೆ. ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ಸಲೀಂ ಅಹ್ಮದ್ ಭೇಟಿ ನೀಡಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.