
ಮಂಗಳೂರು: ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ “ಸ್ಪೆಷಲ್ ಆಕ್ಷನ್ ಫೋರ್ಸ್” (SAF) ಅನ್ನು ಸ್ಥಾಪಿಸಿದೆ. ಈ ವಿಶೇಷ ಪಡೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುವವರ ಮೇಲೆ ತೀವ್ರ ನಿಗಾ ವಹಿಸುತ್ತಿದ್ದು, ಅದರ ಮೊದಲ ಹೆಜ್ಜೆಯಾಗಿ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ.
ಬಂಧಿತ ಯುವಕನನ್ನು ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್. ಕೋಟ್ಯಾನ್ ಎಂದು ಗುರುತಿಸಲಾಗಿದೆ. ಆತ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ಷಣೆ, ರಕ್ತವೇ ಉತ್ತರವಾಗಬೇಕು”, “ಜೀವಕ್ಕೆ ಜೀವವೇ ಬೇಕು” ಎಂದು ಮಾರಕಾಯುಧಗಳ ಚಿಹ್ನೆಗಳನ್ನು ಬಳಸಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಆರೋಪದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತನ ಪೋಸ್ಟ್‌ಗಳು ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂಬ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ಈ ಸ್ಪೆಷಲ್ ಆಕ್ಷನ್ ಫೋರ್ಸ್ ಸ್ಥಾಪನೆಯು ಅಮಾಯಕ ಹಿಂದೂ ಕಾರ್ಯಕರ್ತರನ್ನು ದಮನಿಸುವ ಸರ್ಕಾರದ ಪ್ರಯತ್ನ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಪಡೆಯ ಉದ್ದೇಶದ ಬಗ್ಗೆ ಪ್ರತಿಪಕ್ಷಗಳು ಅನುಮಾನ ವ್ಯಕ್ತಪಡಿಸಿದ್ದು, ಇದು ರಾಜಕೀಯ ಪ್ರೇರಿತ ಕ್ರಮ ಎಂದು ಆರೋಪಿಸಿತ್ತು.