
ರಾಜಸ್ಥಾನ : ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಶುಕ್ರವಾರ (ಜುಲೈ 25) ಬೆಳ್ಳಂಬೆಳಗ್ಗೆ ಸಂಭವಿಸಿದ ದುರಂತದಲ್ಲಿ ಕನಿಷ್ಠ ನಾಲ್ಕು ಮಕ್ಕಳು ಮೃತಪಟ್ಟಿದ್ದು, ಹಲವಾರು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದಾರೆ. ಝಲಾವರ್‌ನ ಪಿಪ್ಲೋಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಛಾವಣಿ ಬೆಳಿಗ್ಗೆ 8:30ರ ಸುಮಾರಿಗೆ ಕುಸಿದು ಬಿದ್ದಿದೆ.
ಘಟನೆ ನಡೆದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ದುರಂತದಲ್ಲಿ 17 ಮಕ್ಕಳು ಗಾಯಗೊಂಡಿದ್ದು, ಅವರಲ್ಲಿ ಹತ್ತು ಮಕ್ಕಳನ್ನು ಝಲಾವರ್ ಆಸ್ಪತ್ರೆಗೆ ದಾಖಲಿಸಲಾಗಿದೆ. “ಮೂರರಿಂದ ನಾಲ್ಕು ಮಕ್ಕಳ ಸ್ಥಿತಿ ಗಂಭೀರವಾಗಿದೆ” ಎಂದು ಝಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ.