
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವ ಕುರಿತ ಅರ್ಜಿ ಇಂದು ವಿಚಾರಣೆ ನಡೆಯಲಿದೆ . ಇದೇ ಪ್ರಕರಣದ ಇತರ ಆರೋಪಿಗಳನ್ನೂ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಜೈಲು ಅಧಿಕಾರಿಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆಗೆ ಕಾರಣ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿದಂತೆ ಹಲವು ಆರೋಪಿಗಳು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದಾರೆ. ಒಂದೇ ಪ್ರಕರಣದ ಎಲ್ಲ ಆರೋಪಿಗಳು ಒಂದೇ ಜೈಲಿನಲ್ಲಿ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾಗಬಹುದು ಎಂದು ಜೈಲು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಮತ್ತು ಇತರ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ವರ್ಗಾಯಿಸಲು ಕೋರಿ 64ನೇ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಪರ ವಕೀಲರಿಂದ ತಕರಾರು
ಜೈಲು ಅಧಿಕಾರಿಗಳ ಅರ್ಜಿಯನ್ನು ವಿರೋಧಿಸಿ ದರ್ಶನ್ ಅವರ ವಕೀಲರು ನ್ಯಾಯಾಲಯಕ್ಕೆ ಪ್ರತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ದರ್ಶನ್ ಅವರನ್ನು ಬೇರೆ ಜೈಲಿಗೆ ವರ್ಗಾಯಿಸಬಾರದು ಎಂದು ಮನವಿ ಮಾಡಿದ್ದಾರೆ. ಇಂದು ಈ ಎರಡೂ ಅರ್ಜಿಗಳ ಕುರಿತು ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ನ್ಯಾಯಾಲಯದ ತೀರ್ಪು ಏನಾಗಿರಬಹುದು ಎಂಬುದನ್ನು ಕಾದು ನೋಡಬೇಕು.