
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿ ಕುತ್ಲೂರು ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಶಾಂತ್ ಮತ್ತು ದಿನೇಶ್ ಎಂದು ಗುರುತಿಸಲಾಗಿದೆ.
ತಾಲೂಕಿನ ಕೊಕ್ರಾಡಿ–ನಾರಾವಿ ಮಾರ್ಗದ ಕುತ್ಲೂರು ಪುರುಷಗುಡ್ಡೆ ಸಮೀಪ ಈ ಅಪಘಾತ ಸಂಭವಿಸಿದ್ದು, ಯುವಕರು ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರೂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಾಶವಾಗಿದ್ದು, ಸ್ಥಳೀಯರು ಶಬ್ದ ಕೇಳಿ ಹೊರಬಂದು ಕೂಡಲೇ ಘಟನೆಯ ಮಾಹಿತಿ ಪೊಲೀಸರಿಗೆ ತಿಳಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.




































