
ಬಾಗಲಕೋಟೆ : ರಾಜ್ಯದಲ್ಲಿ ಇತ್ತೀಚೆಗೆ ಬಾಲಗರ್ಭಿಣಿ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ, ಇದೀಗ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರ್ಕಾರಿ ವಸತಿ ಶಾಲೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿಯೊಬ್ಬ, 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ಘಟನೆ ಮತ್ತು ಪತ್ತೆಹಚ್ಚಿದ ರೀತಿ:
ಜಿಲ್ಲೆಯ ಇಳಕಲ್ ತಾಲೂಕಿನ ಒಂದು ಸರ್ಕಾರಿ ವಸತಿ ಶಾಲೆಯಲ್ಲಿ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ವಸತಿ ವ್ಯವಸ್ಥೆ ಇದೆ. ಇದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮುಧೋಳ ತಾಲೂಕಿನ ಮೂಲದ 8ನೇ ತರಗತಿ ವಿದ್ಯಾರ್ಥಿ, ಅದೇ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಮೂರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ದಾಖಲಿಸಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವಿಷಯವು ಬಾಲಕಿಯ ಕುಟುಂಬದವರಿಗೆ ತಿಳಿದುಬಂದಿರಲಿಲ್ಲ. ಇತ್ತೀಚೆಗೆ ಬಾಲಕಿಯ ವರ್ತನೆಯಲ್ಲಿ ಅನುಮಾನಗೊಂಡ ಪೋಷಕರು ಆಕೆಯನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ, ವೈದ್ಯರು ಬಾಲಕಿ ಗರ್ಭಿಣಿಯಾಗಿರುವುದನ್ನು ದೃಢಪಡಿಸಿದ್ದಾರೆ. ವೈದ್ಯರು ತಕ್ಷಣವೇ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ವಯಂಪ್ರೇರಿತವಾಗಿ ತನಿಖೆ ಆರಂಭಿಸಿದ್ದಾರೆ. ನಂತರ, ಬಾಲಕಿಯ ಕುಟುಂಬದವರು ಘಟನೆಯ ಸತ್ಯಾಂಶವನ್ನು ಒಪ್ಪಿಕೊಂಡಿದ್ದು, ಬಾಲಕಿಯ ತಂದೆ ಅಧಿಕೃತವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕಾನೂನು ಕ್ರಮ ಮತ್ತು ಆಯೋಗದ ಮಧ್ಯಪ್ರವೇಶ:
ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, “ಆಸ್ಪತ್ರೆಯ ವೈದ್ಯರು ನೀಡಿದ ಮಾಹಿತಿಯ ಆಧಾರದ ಮೇಲೆ ನಾವು ವಿಚಾರಣೆ ನಡೆಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಘಟನೆಯ ಗಂಭೀರತೆಯನ್ನು ಮನಗಂಡ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ, “ಈ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಸೋಮವಾರ ಹಾಜರುಪಡಿಸಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿದೆ.