
ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು (ಜುಲೈ 30, 2025, ಬುಧವಾರ) ಜಾಮೀನು ಕುರಿತು ಆದೇಶ ಪ್ರಕಟಿಸಲಿದೆ. ಇದರೊಂದಿಗೆ ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಗಲಿದೆಯೇ ಅಥವಾ ನ್ಯಾಯಾಂಗ ಬಂಧನ ಮುಂದುವರಿಯಲಿದೆಯೇ ಎಂಬುದು ನಿರ್ಧಾರವಾಗಲಿದೆ.
ಇಂದು ತೀರ್ಪು ಪ್ರಕಟ
ಪ್ರಕರಣ ಸಂಬಂಧ ಜುಲೈ 18ರಂದು ವಾದ-ವಿಚಾರಣೆ ಪೂರ್ಣಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು, ಇಂದು ತೀರ್ಪು ಪ್ರಕಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ತೀರ್ಪು ಪ್ರಕಟಿಸುವ ವೇಳೆ ಆರೋಪಿ ಪ್ರಜ್ವಲ್ ರೇವಣ್ಣನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನಾಲ್ಕು ಪ್ರಕರಣಗಳ ಪೈಕಿ ಒಂದು
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ, ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.