
ಕಣ್ಣೂರು: ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ, ಅವರ ಆತ್ಮಹತ್ಯೆಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಶಿಂಜಿತಾ ಮುಸ್ತಫಾ ಅವರನ್ನು ಪೊಲೀಸರು ಕೊನೆಗೂ ಬಲೆಗೆ ಕೆಡವಿದ್ದಾರೆ. ಕೋಝಿಕ್ಕೋಡ್ ನಿವಾಸಿ ದೀಪಕ್ ಅವರು ಬಸ್ಸಿನಲ್ಲಿ ಪ್ರಯಾಣಿಸುವಾಗ ತನಗೆ ಕಿರುಕುಳ ನೀಡಿದ್ದಾರೆಂದು ಶಿಂಜಿತಾ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಈ ವಿಡಿಯೋ ಸಾರ್ವಜನಿಕವಾಗಿ ವೈರಲ್ ಆದ ಬೆನ್ನಲ್ಲೇ ತೀವ್ರ ಮಾನಸಿಕ ಖಿನ್ನತೆ ಮತ್ತು ಅವಮಾನಕ್ಕೊಳಗಾದ ದೀಪಕ್, ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಪ್ರಾಣತ್ಯಾಗ ಮಾಡಿದ್ದರು.
ದೀಪಕ್ ಅವರ ನಿಧನದ ನಂತರ ಅವರ ತಾಯಿ ನಗರ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ನೀಡಿದ್ದು, ಶಿಂಜಿತಾ ಅವರ ಸುಳ್ಳು ಆರೋಪವೇ ಮಗನ ಸಾವಿಗೆ ನೇರ ಕಾರಣ ಎಂದು ಆರೋಪಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಶಿಂಜಿತಾ ಅವರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆಯಿದ್ದ ಕಾರಣ ಪೊಲೀಸರು ವಿಮಾನ ನಿಲ್ದಾಣಗಳಲ್ಲಿ ಲುಕ್ ಔಟ್ ನೋಟಿಸ್ ಕೂಡ ಜಾರಿಗೊಳಿಸಿದ್ದರು. ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರೂ, ತನಿಖಾ ತಂಡವು ಕಾರ್ಯಾಚರಣೆಯನ್ನು ತೀವ್ರಗೊಳಿಸಿತ್ತು. ದೀಪಕ್ ಅವರ ಸಾವಿನ 6 ದಿನಗಳ ನಂತರ, ಆರೋಪಿ ಶಿಂಜಿತಾ ಅಡಗಿದ್ದ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.



































