
ಕಾರ್ಕಳ: ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮೀಣ ಭಾಗದ ಜನರ ದಶಕಗಳ ಕನಸಾಗಿದ್ದ ಕಾಲುಸಂಕಗಳ ನಿರ್ಮಾಣಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧೆಡೆ 8 ನೂತನ ಕಾಲುಸಂಕಗಳನ್ನು ನಿರ್ಮಿಸಲು ರಾಜ್ಯ ಕಾಂಗ್ರೆಸ್ ಸರ್ಕಾರವು 1 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದೆ.
ಮಲೆನಾಡಿನ ಅಂಚಿನಲ್ಲಿರುವ ಈ ಭಾಗದಲ್ಲಿ ಮಳೆಗಾಲದಲ್ಲಿ ಹಳ್ಳ-ಕೊಳ್ಳಗಳನ್ನು ದಾಟುವುದು ಶಾಲಾ ಮಕ್ಕಳು ಹಾಗೂ ರೈತರಿಗೆ ಪ್ರಾಣಾಪಾಯ ತಂದೊಡ್ಡುತ್ತಿತ್ತು. ಈ ಗಂಭೀರ ಸಮಸ್ಯೆಯನ್ನು ಮನಗಂಡು ಸತತ ಪ್ರಯತ್ನ ನಡೆಸಿದ್ದ ಕಾರ್ಕಳದ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರ ಮನವಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿಶೇಷ ಆಸಕ್ತಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹಕಾರದಿಂದ ಈ ಅನುದಾನ ಬಿಡುಗಡೆಯಾಗಿದೆ.
ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಉದಯ ಶೆಟ್ಟಿ ಮುನಿಯಾಲು ಅವರು, “ನಮ್ಮ ಭಾಗದ ಅಭಿವೃದ್ಧಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.



































