
ಕಾರ್ಕಳ : ಶಾಲೆಯಿಂದ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಗಂಭೀರ ಪ್ರಕರಣವೊಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ರಿಕ್ಷಾ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಬೋಳ ನಿವಾಸಿ ಅಮರನಾಥ್ ಪೂಜಾರಿ (31) ಎಂದು ಗುರುತಿಸಲಾಗಿದೆ. 16 ವರ್ಷದ ಬಾಲಕಿಯು ಫೆ. 25 ರಂದು ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ, ಪರಿಚಿತ ರಿಕ್ಷಾ ಚಾಲಕ ಅಮರನಾಥ್ ಮನೆಗೆ ಬಿಡುವುದಾಗಿ ನಂಬಿಸಿ ಆಕೆಯನ್ನು ತನ್ನ ವಾಹನದಲ್ಲಿ ಹತ್ತಿಸಿಕೊಂಡಿದ್ದಾನೆ. ಜನರಿಲ್ಲದ ನಿರ್ಜನ ಪ್ರದೇಶದ ದಾರಿ ಮಧ್ಯೆ ರಿಕ್ಷಾ ನಿಲ್ಲಿಸಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಬಾಲಕಿ ಆತನಿಂದ ಹೇಗೋ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಸ್ಥರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಫೆ. 26 ರಂದು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿರುವ ಈ ಘಟನೆ ಸ್ಥಳೀಯವಾಗಿ ಆಕ್ರೋಶಕ್ಕೆ ಕಾರಣವಾಗಿದೆ.



































