
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರವು ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಕುರಿತು ಮುಂದಿನ ಎರಡು ದಿನಗಳಲ್ಲಿ ಅಧಿಕೃತ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ.
ಕೇಂದ್ರ ಸರ್ಕಾರವು ತನ್ನ ನೌಕರರು ಮತ್ತು ಪಿಂಚಣಿದಾರರಿಗೆ ಶೇ 3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ ಬೆನ್ನಲ್ಲೇ, ಕರ್ನಾಟಕ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ಶೇ. 2ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಲು ಒಪ್ಪಿಗೆ ನೀಡಿದೆ.
ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಮಾಹಿತಿ ಹಂಚಿಕೊಂಡಿದ್ದು, “ದಿನಾಂಕ 01-07-2025 ರಿಂದ ಅನ್ವಯವಾಗುವಂತೆ ಶೇ. 2ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ,” ಎಂದು ತಿಳಿಸಿದ್ದಾರೆ.
ಈ ಹಿಂದೆ, ಜುಲೈ 1 ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿ.ಎಸ್. ಷಡಾಕ್ಷರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗೆ ದೀಪಾವಳಿಗೂ ಮುನ್ನವೇ ಸರ್ಕಾರ ಸ್ಪಂದಿಸಿದೆ.