
ನವದೆಹಲಿ : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕವೂ ಸೇರಿದಂತೆ ದೇಶದ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಸಮಗ್ರ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಕೈಗೆತ್ತಿಕೊಳ್ಳಲು ಆಯೋಗವು ಸಜ್ಜಾಗಿದೆ.
ಭಾರತೀಯ ಚುನಾವಣಾ ಆಯೋಗವು ಈಗಾಗಲೇ ಮೊದಲ ಹಂತದಲ್ಲಿ 12 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದರ ಮುಂದುವರಿದ ಭಾಗವಾಗಿ, ಮುಂಬರುವ ಏಪ್ರಿಲ್ ತಿಂಗಳಿನಿಂದ ಕರ್ನಾಟಕ ಸೇರಿದಂತೆ ಒಟ್ಟು 22 ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಆರಂಭಿಸಲು ದಿನಾಂಕ ನಿಗದಿಪಡಿಸಲಾಗಿದೆ. ಈ ಕುರಿತು ಆಯಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಆಯೋಗವು, ಏಪ್ರಿಲ್‌ನಲ್ಲಿ ಪ್ರಕ್ರಿಯೆ ಆರಂಭವಾಗುವ ಮುನ್ನ ಎಲ್ಲಾ ಪೂರ್ವಸಿದ್ಧತಾ ಕಾರ್ಯಗಳನ್ನು ಶೀಘ್ರವಾಗಿ ಮುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಬೃಹತ್ ಅಭಿಯಾನದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಹರ್ಯಾಣ, ತೆಲಂಗಾಣ, ಮಹಾರಾಷ್ಟ್ರ, ಪಂಜಾಬ್ ಮತ್ತು ದೆಹಲಿಯಂತಹ ಪ್ರಮುಖ ರಾಜ್ಯಗಳು ಸೇರಿವೆ. ಈ ಹಿಂದೆ ಬಿಹಾರದಲ್ಲಿ ಪ್ರಾಯೋಗಿಕವಾಗಿ ಆರಂಭಗೊಂಡ ಈ ಎಸ್‌ಐಆರ್ ಯೋಜನೆ ಅತ್ಯಂತ ಯಶಸ್ವಿಯಾಗಿತ್ತು. ಆನಂತರ ಕಳೆದ ಅಕ್ಟೋಬರ್‌ನಲ್ಲಿ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆಯನ್ನು ವಿಸ್ತರಿಸಲಾಗಿತ್ತು. ಮತಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸುವುದು, ಮರಣ ಹೊಂದಿದವರ ಹೆಸರನ್ನು ತೆಗೆದುಹಾಕುವುದು ಮತ್ತು ಅರ್ಹ ಯುವ ಮತದಾರರನ್ನು ಸೇರ್ಪಡೆಗೊಳಿಸುವುದು ಈ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ. ಏಪ್ರಿಲ್ 1 ರಿಂದ ಈ ಕಾರ್ಯ ಚುರುಕುಗೊಳ್ಳುವ ನಿರೀಕ್ಷೆಯಿದೆ.




































