
ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯ (LoC) ಸಮೀಪ ಪಾಕಿಸ್ತಾನದ ಬೆಂಬಲಿತ ಉಗ್ರರು ಒಳನುಸುಳುವಿಕೆ ಯತ್ನ ನಡೆಸಿದ್ದು, ಇದನ್ನು ತಡೆಯುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಘಟನೆಯ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಗಸ್ಟ್ 12ರ ತಡರಾತ್ರಿ ಈ ಘಟನೆ ನಡೆದಿದ್ದು, ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿವೆ. ಗಡಿ ಭಾಗದಲ್ಲಿ ನಡೆಯುತ್ತಿದ್ದ ಗಸ್ತು ಕಾರ್ಯಾಚರಣೆಯ ವೇಳೆ ಸಂಶಯಾಸ್ಪದ ಚಲನವಲನಗಳು ಕಂಡುಬಂದಾಗ, ಯೋಧರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಈ ವೇಳೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ನಮ್ಮ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಆ ಘಟನೆಗೆ ಪ್ರತಿಯಾಗಿ ಭಾರತೀಯ ಸೇನೆಯು “ಆಪರೇಷನ್ ಸಿಂಧೂರ್” ಎಂಬ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಿರ್ದಿಷ್ಟ ದಾಳಿಗಳನ್ನು ನಡೆಸಿತ್ತು. ಈ ದಾಳಿಯ ನಂತರ ಪಾಕಿಸ್ತಾನದ ಕಡೆಯಿಂದ ಇದು ಮೊದಲ ಪ್ರಮುಖ ಪ್ರಚೋದನೆ ಎಂದು ಸೇನೆಯ ಮೂಲಗಳು ಹೇಳಿವೆ.
ಇನ್ನೂ ಉಗ್ರರು ಅದೇ ಪ್ರದೇಶದಲ್ಲಿ ಅಡಗಿರುವ ಸಾಧ್ಯತೆ ಇರುವುದರಿಂದ, ಭಾರತೀಯ ಸೇನೆಯು ದೊಡ್ಡ ಪ್ರಮಾಣದ ಶೋಧ ಮತ್ತು ನಿಗ್ರಹ ಕಾರ್ಯಾಚರಣೆಗಳನ್ನು ಕೈಗೊಂಡಿದೆ. ಪರಿಸ್ಥಿತಿಯು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೂ ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ, ಆಗಸ್ಟ್ 11ರಂದು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ, ಗಡಿ ಭದ್ರತಾ ಪಡೆ (BSF) ಸಿಬ್ಬಂದಿ ಗುಂಡು ಹಾರಿಸಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ಗಡಿ ನುಸುಳುವಿಕೆ ಗುಂಪಿನ ಭಾಗವಾಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಗಡಿ ಭಾಗದಲ್ಲಿ ಪಾಕಿಸ್ತಾನ ಪ್ರೇರಿತ ಉಗ್ರರ ಚಟುವಟಿಕೆಗಳು ಪುನಃ ಹೆಚ್ಚಾಗುತ್ತಿರುವುದು ಭಾರತೀಯ ಭದ್ರತಾ ಸಂಸ್ಥೆಗಳಿಗೆ ಸವಾಲನ್ನು ಒಡ್ಡಿದೆ.