
ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ದಶಕಗಳಿಂದ ಚರ್ಚೆಯಾಗುತ್ತಿರುವ ‘ದಲಿತ ಮುಖ್ಯಮಂತ್ರಿ’ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಇಂದು (ಜನವರಿ 15, 2026) ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ದಲಿತ ಸಿಎಂ ಎಂಬುದು ಒಂದು ದೊಡ್ಡ ಕನಸಾಗಿ ಉಳಿದಿದೆ. ಈ ಹಿಂದೆ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದಾಗ ಅವರಿಗೆ ಸಿಎಂ ಆಗುವ ಅವಕಾಶ ಸಿಗಬೇಕಿತ್ತು ಎಂಬ ನೋವು ಇಂದಿಗೂ ಸಮುದಾಯದಲ್ಲಿದೆ ಎಂದು ಸ್ಮರಿಸಿದರು. ರಾಜ್ಯದ ಶೇ. 25ರಷ್ಟು ದಲಿತ ಸಮುದಾಯವು ಶೇ. 75ರಷ್ಟು ಮತಗಳನ್ನು ಕಾಂಗ್ರೆಸ್‌ಗೆ ನೀಡುತ್ತಾ ಬಂದಿದ್ದರೂ, ಸಮುದಾಯಕ್ಕೆ ಉನ್ನತ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಅಂಶವನ್ನು ಈಗಾಗಲೇ ವರಿಷ್ಠರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದರು.
ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಮತ್ತು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ನಾವೆಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಹೇಳಿದರು. ಇದೇ ವೇಳೆ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಈ ಯೋಜನೆಗಳ ಜನಪ್ರಿಯತೆಯೇ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರಲಿದೆ ಎಂದು ಭವಿಷ್ಯ ನುಡಿದರು.



































