
ಶಿರಸಿ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಶಿರಸಿ-ಕುಮಟಾ ರಸ್ತೆ ಮಾರ್ಗದಲ್ಲಿ ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ರಸ್ತೆಯಲ್ಲಿ ಜಾರುವ ಮಣ್ಣು, ಬಂಡೆಗಳ ಕುಸಿತದ ಭೀತಿ ಇರುವ ಕಾರಣದಿಂದಾಗಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿರಸಿ ಹಾಗೂ ಕುಮಟಾ ಎರಡು ಕಡೆಯಿಂದಲೂ ರಾತ್ರಿ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ.
ಸಂಚಾರ ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ದಾರಿಯ ಎರಡೂ ತುದಿಗಳಲ್ಲಿಯೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಅಪಾಯದಿಂದ ಜನರನ್ನು ಎಚ್ಚರಿಸಲು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ. ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಮತ್ತೆ ಹದಗೆಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಂದ ಸಹಕಾರವನ್ನು ಕೋರಲಾಗಿದೆ.