
ಉಡುಪಿ: ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸೂಕ್ತ ನೆರವು ಒದಗಿಸುವ ಭರವಸೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ನೀಡಿದ್ದಾರೆ.
ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್‌ನಲ್ಲಿ ಮಂಗಳವಾರ (ಅ. 14) ಈಜಲು ತೆರಳಿದ್ದ ಸಂಕೇತ್ (16), ಸೂರಜ್ (15), ಮತ್ತು ಆಶಿಶ್ (14) ಎಂಬ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ ಕೂಡಲೇ ಮಾಹಿತಿ ಸಂಗ್ರಹಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, “ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ,” ಎಂದು ಪ್ರಾರ್ಥಿಸಿದರು. ಅಲ್ಲದೆ, “ಜಿಲ್ಲೆಯಲ್ಲಿ ಇಂತಹ ದುರಂತ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ತಕ್ಷಣ ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಸೂಚಿಸಿದರು.