
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹11.5 ಲಕ್ಷ ದಂಡ ವಿಧಿಸಿದ ಬೆನ್ನಲ್ಲೇ, ಈ ತೀರ್ಪಿನ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್ ಗ್ರಾಮದಲ್ಲಿ ಮಾತನಾಡಿದ ನಿಖಿಲ್, “ಕೋರ್ಟ್ ತೀರ್ಪಿಗೆ ತಲೆಬಾಗಬೇಕು. ಯಾರೇ ಇದ್ದರೂ ತಲೆಬಾಗಲೇಬೇಕು. ಈ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ” ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಬಂದಾಗಲೇ ಜೆಡಿಎಸ್ ಪಕ್ಷದಿಂದ ಅವರನ್ನು ಅಮಾನತುಗೊಳಿಸಲಾಗಿತ್ತು ಎಂಬುದನ್ನು ಅವರು ನೆನಪಿಸಿದರು. “ಆಗ ಇನ್ನೂ ಅವರು ಅಪರಾಧಿಯೋ ಅಥವಾ ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ಪಕ್ಷದ ವರಿಷ್ಠರ ತೀರ್ಮಾನದ ಸ್ಪಷ್ಟತೆಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು” ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.