
ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕಳೆದ ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿ ಅವರನ್ನು ಉಜಿರೆಯಲ್ಲಿ ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರು ಹಿರಿಯಡ್ಕ ಜೈಲಿನಲ್ಲಿದ್ದರು.
ಶನಿವಾರ ಬೆಳಗ್ಗೆ 11 ಗಂಟೆಗೆ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಗಿತ್ತು. ಈ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ಪೊಲೀಸರು ಆರೋಪಿಯನ್ನು ನಿಗದಿತ ಸಮಯಕ್ಕೆ ಹಾಜರುಪಡಿಸದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ತೀವ್ರ ತರಾಟೆಗೆ ತೆಗೆದುಕೊಂಡರು. ನಿಮ್ಮಲ್ಲಿಯೇ ವೈಫಲ್ಯ ಇರುವಾಗ ಕಸ್ಟಡಿ ಏಕೆ ಎಂದು ಪ್ರಶ್ನಿಸಿ ಮಧ್ಯಾಹ್ನ 3:30ಕ್ಕೆ ಹಾಜರುಪಡಿಸುವಂತೆ ಸೂಚಿಸಿದರು.
ಸಂಜೆ ವಿಚಾರಣೆ ಮುಂದುವರಿಸಿದ ನ್ಯಾಯಾಲಯವು, ಮಹೇಶ್ ಶೆಟ್ಟಿ ತಿಮರೋಡಿ ಅವರ ಆರೋಗ್ಯದ ದೃಷ್ಟಿಯಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.