
ಮಂಗಳೂರು: ಮಂಗಳೂರಿನ ನಂತೂರು ಸರ್ಕಲ್ ಬಳಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಕಾರೊಂದರ ಹಿಂಬದಿ ಗಾಜನ್ನು ಒಡೆದುಹಾಕಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಡ್ರಂಕ್ ಆ್ಯಂಡ್ ಡ್ರೈವ್ (Drunk and Drive) ಅನುಮಾನದ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಕಾರು ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಆದರೆ, ಚಾಲಕ ಕಾರು ನಿಲ್ಲಿಸದೇ ಮುಂದೆ ಸಾಗಿದ್ದಾನೆ. ಇದರಿಂದ ಕೋಪಗೊಂಡ ಪೊಲೀಸ್ ಸಿಬ್ಬಂದಿ ಕಾರಿನ ಹಿಂಬದಿ ಗ್ಲಾಸ್ ಅನ್ನು ಒಡೆದುಹಾಕಿದ್ದಾರೆ.
ಈ ಘಟನೆಯ ನಂತರ, ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬಳಿಕ ಚಾಲಕನ ವಿರುದ್ಧ ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಈ ವಿವಾದಾತ್ಮಕ ನಡೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.




































