
ಮಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಬಲವರ್ಧನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು 402 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಸಿದ್ಧವಾಗಿದೆ. ಆದಷ್ಟು ಬೇಗ 402 ಪಿಎಸ್‌ಐ ಮತ್ತು 10 ರಿಂದ 15 ಸಾವಿರ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ” ಎಂದು ತಿಳಿಸಿದರು.
ಮಂಗಳೂರಿನ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವ ಬೇಡಿಕೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಬಗ್ಗೆ ಸಾಧಕ-ಬಾಧಕಗಳ ಕುರಿತು ಚರ್ಚಿಸಿ, ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಪೊಲೀಸ್ ಇಲಾಖೆಯನ್ನು ಬಲಪಡಿಸಲು ಸಿಬ್ಬಂದಿ ನೇಮಕಾತಿ ಅನಿವಾರ್ಯವಾಗಿದೆ ಎಂದು ಗೃಹ ಸಚಿವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.