
ಹೊಸದಿಲ್ಲಿ: ದಿಲ್ಲಿ ಹೈಕೋರ್ಟ್‌ನ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶ ಶಿವರಾಮನ್, ಪಂಜಾಬ್-ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಧಾವಾಲಿಯಾ ಸೇರಿದ್ದಾರೆ.
ಈ ಸಂಬಂಧ ಸುಪ್ರೀಂಕೋರ್ಟ್ ಪ್ರತಿಕಾ ಪ್ರಕಟಣೆ ಹೊರಡಿಸಿದ್ದು, ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರಿಗೆ ನ್ಯಾ.ವರ್ಮಾ ಅವರ ಮೇಲೆ ತಾತ್ಕಾಲಿಕ ನಿರ್ಬಂಧ ವಿಧಿಸಲು ಸಿಜೆಐ ಸೂಚನೆ ನೀಡಿದ್ದಾರೆ. ಮಾರ್ಚ್ 14ರಂದು ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ದಿಲ್ಲಿ ಹೈಕೋರ್ಟ್ ಈಗಾಗಲೇ ತನಿಖೆ ನಡೆಸಿತ್ತು.
2018ರ ಹಳೇ ಪ್ರಕರಣವೂ ಮುನ್ನೆಲೆಗೆ
ನ್ಯಾ. ವರ್ಮಾ 2018ರಲ್ಲಿ ಉತ್ತರ ಪ್ರದೇಶದ ಸಿಂಭವೋಲಿ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ವೇಳೆ 148.9 ಕೋಟಿ ರೂ. ವಂಚನೆ ಆರೋಪ ಹೊರಳಾಗಿತ್ತು. ಈ ಸಂಬಂಧ ಸಿಬಿಐ ಕೂಡಾ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದೀಗ ಹೊಸ ಪ್ರಕರಣದ ಹಿನ್ನೆಲೆಯಲ್ಲಿ ಈ ಹಳೆಯ ಪ್ರಕರಣವೂ ಮತ್ತೆ ಚರ್ಚೆಗೆ ಬಂದಿದೆ.