
ಬೆಳಗಾವಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದೇ ಮಕ್ಕಳ ಆರೋಗ್ಯದಲ್ಲಿ ಏರುಪೇರಿಗೆ ಕಾರಣ ಎಂದು ಶಂಕಿಸಲಾಗಿದೆ.
ಇಂದು ಮಧ್ಯಾಹ್ನ ಒಟ್ಟಿಗೆ ಬಿಸಿಯೂಟ ಸೇವಿಸಿದ್ದ ಮಕ್ಕಳಿಗೆ, ಊಟದ ಬಳಿಕ ಹೊಟ್ಟೆ ನೋವು, ವಾಂತಿ ಮತ್ತು ತಲೆಸುತ್ತಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ. ಕೂಡಲೇ ಅಸ್ವಸ್ಥಗೊಂಡ ಮಕ್ಕಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ 24 ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರ ಗಡಾದಿ ಮತ್ತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “ಮಕ್ಕಳ ಆರೋಗ್ಯ ಸ್ಥಿರವಾಗಿದೆ, ಯಾವುದೇ ಗಂಭೀರ ಸಮಸ್ಯೆ ಇಲ್ಲ. ಚಿಕಿತ್ಸೆಯಿಂದ ಎಲ್ಲರೂ ಗುಣಮುಖರಾಗುತ್ತಿದ್ದಾರೆ,” ಎಂದು ಡಿಡಿಪಿಐ ಲೀಲಾವತಿ ಹಿರೇಮಠ ಹೇಳಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಿಸಿಯೂಟದ ಗುಣಮಟ್ಟ ಮತ್ತು ಆಹಾರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಘಟನೆಯಿಂದ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರಲ್ಲಿ ಆತಂಕ ಮೂಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.