
ಹೆಬ್ರಿ: ಮುದ್ರಾಡಿಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅದ್ದೂರಿಯಾಗಿ ಆಯೋಜಿಸಿರುವ 6ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಮಿತಿ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಅವರು ಶನಿವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 29 ರಂದು ಮುದ್ರಾಡಿ ಗುರುರಕ್ಷಾ ಸೌಹಾರ್ದ ಸಹಕಾರಿ ಸೊಸೈಟಿಯ ಆವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಬಾರಿಯ ಶಾರದೋತ್ಸವವು ಶಾರದ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭವಾಗಲಿದೆ. ನಂತರ ಅಕ್ಷರಾಭ್ಯಾಸ, ಮಹಾಪೂಜೆ ಮತ್ತು ರಸಪ್ರಶ್ನೆ ಕಾರ್ಯಕ್ರಮಗಳು ನಡೆಯಲಿವೆ. ಸಭಾ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಗುವುದು. ಅದರ ಜೊತೆಗೆ, ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಬಳಿಕ, ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ ವೇಳೆಗೆ, ಮನರಂಜನೆಗಾಗಿ ಸ್ಥಳೀಯ ಕಲಾವಿದರಿಂದ ಹಾಗೂ ಮಸ್ಕಿರಿ ಕುಡ್ಲ ತಂಡದವರಿಂದ ‘ತೆಲಿಕೆ ಬಂಜಿ ನಿಲಿಕೆ’ ಎಂಬ ಹಾಸ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿತಗೊಂಡಿವೆ. ಕಾರ್ಯಕ್ರಮದ ಕೊನೆಯಲ್ಲಿ ವಿಸರ್ಜನಾ ಪೂಜೆ ಮತ್ತು ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನೆಯೊಂದಿಗೆ ಶಾರದಾ ಮಾತೆಯ ಶೋಭಾಯಾತ್ರೆ ನಡೆಯಲಿದ್ದು, ಜಲಸ್ತಂಭನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಮಿತಿ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರಾದ ಚಂದ್ರಶೇಖರ ಬಾಯರಿ, ಗೌರವ ಸಲಹೆಗಾರರಾದ ಗಣಪತಿ ಎಂ., ಶಶಿಕಲಾ ಡಿ. ಪೂಜಾರಿ, ಸನತ್ ಕುಮಾರ್ ಮುದ್ರಾಡಿ, ಸಂತೋಷ್ ಪೂಜಾರಿ ನೆಕ್ಕಾರ್ ಬೆಟ್ಟು, ಗುರುಪ್ರಸಾದ್ ಹೆಗ್ಡೆ ಕೊಳಂಬೆ ಸೇರಿದಂತೆ ಸಮಿತಿಯ ಅನೇಕ ಸದಸ್ಯರು ಉಪಸ್ಥಿತರಿದ್ದರು. ಕೋಶಾಧಿಕಾರಿ ಬಲ್ಲಾಡಿ ಚಂದ್ರಶೇಖರ ಭಟ್ ಸ್ವಾಗತಿಸಿದರೆ, ಗೌರವ ಸಲಹೆಗಾರರಾದ ಸಂತೋಷ್ ಕುಮಾರ್ ಶೆಟ್ಟಿ ವಂದಿಸಿದರು.