
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪದಚ್ಯುತಿ ಬಹುತೇಕ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸಿದ್ದರಾಮಯ್ಯನವರಿಂದ ರಾಜೀನಾಮೆ ಪಡೆಯುವ ಪೂರ್ವತಯಾರಿ ನಡೆಸಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಸಿದ್ದರಾಮಯ್ಯನವರು ಅತೀ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ತೆರಳಲಿದ್ದಾರೆ ಎಂದು ಅವರು ಮೈಸೂರಿನಲ್ಲಿ ಭಾನುವಾರ (ಜುಲೈ 7) ಸುದ್ದಿಗಾರರಿಗೆ ತಿಳಿಸಿದರು.
ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಓಬಿಸಿ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿರುವುದು, ಅವರು ದೆಹಲಿಗೆ ವರ್ಗಾವಣೆಯಾಗುವುದು ನಿಶ್ಚಿತ ಎಂಬುದನ್ನು ಸೂಚಿಸುತ್ತದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.
ತಮ್ಮ ರಾಜ್ಯಾಧ್ಯಕ್ಷ ಸ್ಥಾನದ ಮುಂದುವರಿಕೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ವಿಜಯೇಂದ್ರ, “ನನ್ನ ಹೋರಾಟದ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ಹೈಕಮಾಂಡ್ ತೃಪ್ತರಾಗಿದ್ದಾರೆ. ಅಂತಿಮ ನಿರ್ಧಾರವನ್ನು ನಮ್ಮ ಹೈಕಮಾಂಡ್ ತೆಗೆದುಕೊಳ್ಳುತ್ತದೆ” ಎಂದರು. ನಗುಮುಖದಿಂದಲೇ ಮಾಧ್ಯಮದವರನ್ನುದ್ದೇಶಿಸಿ, “ನನ್ನ ನಗುಮುಖ ನೋಡಿದರೆ ನಾನು ಬದಲಾಗುತ್ತೇನೆ ಎಂದು ನಿಮಗೆ ಅನಿಸುತ್ತದೆಯೇ? ನಾನು ಬದಲಾಗಬೇಕೇ? ಮುಂದುವರಿಯಬೇಕೇ? ನೀವೇ ಹೇಳಿ” ಎಂದು ಕೇಳಿದರು.
ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಘಟನೆಗಳ ಕುರಿತು ಮಾತನಾಡಿದ ವಿಜಯೇಂದ್ರ, “ರಾಜ್ಯದಲ್ಲಿ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಪಸಂಖ್ಯಾತರ ಓಲೈಕೆ ನೀತಿಯೇ ಇದಕ್ಕೆ ಕಾರಣ. ಸಿದ್ದರಾಮಯ್ಯ ಸರ್ಕಾರವು ತಾವು ಏನು ಮಾಡಿದರೂ ನಡೆಯುತ್ತದೆ ಎಂದು ಭಾವಿಸಿದೆ. ಈ ಧೈರ್ಯದಿಂದಲೇ ಇಂತಹ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ” ಎಂದು ಆರೋಪಿಸಿದರು. ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ಬರಲಾಗಿದೆ. ಆದರೆ ಈಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಶಾಸಕ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, “ರಾಯರೆಡ್ಡಿ ಅವರ ಹೇಳಿಕೆ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಕನ್ನಡಿಯಾಗಿದೆ. ದುರಹಂಕಾರದಿಂದ ಅವರು ಇಂತಹ ಮಾತುಗಳನ್ನಾಡಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಈಗ ‘ಗ್ಯಾರಂಟಿ ಬೇಕೋ ರಸ್ತೆ ಬೇಕೋ’ ಎಂದು ಕೇಳುವುದು ಹಾಸ್ಯಾಸ್ಪದ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರಾಯರೆಡ್ಡಿ ಮೂಲಕ ಇಂತಹ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.