
ನವದೆಹಲಿ : ಕಳೆದ ಮೂರ್ನಾಲ್ಕು ತಿಂಗಳಿಂದ ನಡೆಯುತ್ತಿರುವ ಚರ್ಚೆಗೆ ಶೀಘ್ರವೇ ತೆರೆ ಬೀಳುವ ಸಾಧ್ಯತೆಯಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಜೆಪಿಯ ಮುಂದಿನ ರಾಷ್ಟ್ರೀಯ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಈ ಕುರಿತಾಗಿ ಹಲವಾರು ಮಾಧ್ಯಮಗಳು ವರದಿ ಪ್ರಕಟಿಸಿದ್ದು, ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯನ್ನು ಸೆಪ್ಟೆಂಬರ್ 28ರೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ. ಈ ಮಹತ್ವದ ನಿರ್ಧಾರವು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ನಾಯಕತ್ವದಲ್ಲಿ ಸ್ಪಷ್ಟತೆ ತರಲಿದೆ ಎನ್ನಲಾಗುತ್ತಿದೆ.
ಚೌಹಾಣ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿರುವುದು ಈ ಊಹಾಪೋಹಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. ಈ ಭೇಟಿಯು ಪಕ್ಷದಲ್ಲಿನ ಸಂಭಾವ್ಯ ನಾಯಕತ್ವ ಬದಲಾವಣೆಯ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.
ಆದರೆ, ಈ ವಿಷಯದ ಕುರಿತು ಇದುವರೆಗೆ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಡೆಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.