
ಮೈಸೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ (NIA) ತನಿಖೆಯ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಇದೇ ವೇಳೆ ಮನವಿ ಮಾಡಿದರು.
ಮೈಸೂರಿನಲ್ಲಿ ತಮ್ಮ ಹುಟ್ಟುಹಬ್ಬದ ಪರಮೋತ್ಸವ
ಕಾರ್ಯಕ್ರಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, “ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಈಗಾಗಲೇ ಎಸ್‌ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸತ್ಯ ಹೊರಬರಬೇಕು ಎಂಬುದು ನಮ್ಮ ಉದ್ದೇಶ. ಹಾಗಾಗಿ, ತನಿಖೆಯನ್ನು ನಿಲ್ಲಿಸುವ ಬದಲು ಮುಂದುವರೆಸಲು ಅವಕಾಶ ನೀಡಬೇಕು” ಎಂದರು.
ಹಲವು ನಾಯಕರು ಈ ಪ್ರಕರಣದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, “ಕೇವಲ ಹೇಳಿಕೆಗಳಿಂದ ಸತ್ಯ ಹೊರಬರುವುದಿಲ್ಲ, ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ. ಹಾಗಾಗಿ ಯಾರೂ ಈ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು” ಎಂದು ಹೇಳಿದರು.