
ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಇತ್ತೀಚಿನ ವಿವಾದಾತ್ಮಕ ಪ್ರಕರಣಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಬಳ್ಳಾರಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಾಯವನ್ನು ತಳ್ಳಿಹಾಕಿರುವ ಅವರು, ರಾಜ್ಯ ಪೊಲೀಸ್ ಇಲಾಖೆಯ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದಿದ್ದಾರೆ.
ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ ಸಚಿವರು, “ನಮ್ಮ ಪೊಲೀಸರು ಅತ್ಯಂತ ಸಮರ್ಥರಾಗಿದ್ದಾರೆ. ತನಿಖೆ ನಡೆಸಲು ಸಾಧ್ಯವೇ ಇಲ್ಲ ಎಂಬಂತಹ ಅನಿವಾರ್ಯ ಪರಿಸ್ಥಿತಿ ಎದುರಾದಾಗ ಮಾತ್ರ ಸಿಬಿಐ ಮೊರೆ ಹೋಗುವುದು ಸೂಕ್ತ. ಈಗಾಗಲೇ ಸಂಪುಟ ಸಭೆಯಲ್ಲಿ ಯಾವುದೇ ಪ್ರಕರಣಗಳನ್ನು ಸಿಬಿಐಗೆ ವಹಿಸಬಾರದು ಎಂದು ನಿರ್ಧರಿಸಲಾಗಿದೆ,” ಎಂದು ಖಡಕ್ಕಾಗಿ ತಿಳಿಸಿದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವೈಯಕ್ತಿಕ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ಪ್ರಸ್ತುತ ಕೇಂದ್ರ ಸಚಿವರಾಗಿದ್ದಾರೆ. ಅವರು ನನ್ನ ಬಗ್ಗೆ ವೈಯಕ್ತಿಕವಾಗಿ ಆಡಿರುವ ಮಾತುಗಳನ್ನು ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸುಮಾರು 38 ವರ್ಷಗಳ ಸುದೀರ್ಘ ರಾಜಕೀಯ ಅನುಭವ ನನಗಿದೆ. ರಾಜ್ಯದ ಆಡಳಿತವನ್ನು ಹೇಗೆ ನಡೆಸಬೇಕು ಎಂಬ ಅರಿವು ನನಗೂ ಇದೆ. ಅವರ ವ್ಯಕ್ತಿತ್ವ ನನಗೂ ತಿಳಿದಿದೆ, ನನ್ನ ಸಾಮರ್ಥ್ಯ ಅವರಿಗೂ ಗೊತ್ತಿದೆ,” ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಇನ್ನು ಹುಬ್ಬಳ್ಳಿ ಘಟನೆಯಲ್ಲಿ ಮಹಿಳೆಯ ವಿವಸ್ತ್ರಗೊಳಿಸುವಿಕೆಯ ಆರೋಪದ ಬಗ್ಗೆ ಮಾತನಾಡಿದ ಅವರು, “ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಬಂಧನದ ವೇಳೆ ಮಹಿಳೆಯೇ ಅಂತಹ ವರ್ತನೆ ತೋರಿದ್ದಾರೆ ಎಂದು ಕಮಿಷನರ್ ಹೇಳಿದ ಮೇಲೆ ಅದರಲ್ಲಿ ಸಂಶಯ ಪಡಲು ಏನೂ ಇಲ್ಲ. ಪ್ರತಿ ವಿಚಾರದಲ್ಲೂ ರಾಜಕೀಯ ಬೆರೆಸುವುದು ಅಥವಾ ಮಹಿಳೆಯರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಕ್ರಮ ಬಾಂಗ್ಲಾ ವಲಸಿಗರ ವಿಚಾರವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ ಅವರು, ಅನಧಿಕೃತವಾಗಿ ನೆಲೆಸಿರುವವರನ್ನು ಪತ್ತೆ ಹಚ್ಚಿ ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ ಎಂದು ಭರವಸೆ ನೀಡಿದರು.



































