
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದು (ಆಗಸ್ಟ್ 15) ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷಿದ್ಧ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
ಪ್ಲಾಸ್ಟಿಕ್ ನಿಷೇಧದ ಕುರಿತು ಈಗಾಗಲೇ ಆದೇಶ ಹೊರಡಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡ ವಿಧಿಸಲು ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಷ್ಟೇ ಅಲ್ಲದೆ, ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಈ ಕ್ರಮವು ದೇವಾಲಯಗಳ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಸಹಕಾರಿಯಾಗಲಿದೆ.