
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ, ಆಗಸ್ಟ್ 10 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಹಲವು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇವರ ಭೇಟಿಯ ಪ್ರಮುಖ ಉದ್ದೇಶಗಳು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ ನಮ್ಮ ಮೆಟ್ರೋದ ಹಳದಿ ಮಾರ್ಗದ ಉದ್ಘಾಟನೆ. ಈ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತ ಪ್ರವಾಸದ ವೇಳಾಪಟ್ಟಿ ಬಿಡುಗಡೆಯಾಗಿದೆ.
ವಂದೇ ಭಾರತ್‌ಗೆ ಹಸಿರು ನಿಶಾನೆ
ಬೆಳಗ್ಗೆ 11.10ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು, ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ, ವರ್ಚುವಲ್ ಮೂಲಕ ಅಮೃತಸರ-ಶ್ರೀಮಾತಾ ವೈಷ್ಣೋ ದೇವಿ ಕಟ್ರಾ ಮತ್ತು ನಾಗಪುರ-ಪುಣೆ ವಂದೇ ಭಾರತ್ ರೈಲು ಸೇವೆಗಳಿಗೂ ಹಸಿರು ನಿಶಾನೆ ತೋರಿಸಲಿದ್ದಾರೆ.
ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ
ರೈಲು ಉದ್ಘಾಟನೆಯ ಬಳಿಕ ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಯವರು, ಅಲ್ಲಿಂದ ಎಲೆಕ್ಟ್ರಾನಿಕ್ ಸಿಟಿವರೆಗಿನ ಹಳದಿ ಮಾರ್ಗದಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಬೆಂಗಳೂರು ಮೆಟ್ರೋ ಹಂತ-3ಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಆರ್‌ವಿ ರಸ್ತೆ-ಬೊಮ್ಮಸಂದ್ರವರೆಗಿನ ಹಳದಿ ಮಾರ್ಗವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ.
ಪ್ರವಾಸದ ಸಂಪೂರ್ಣ ವೇಳಾಪಟ್ಟಿ
- ಬೆಳಗ್ಗೆ 10:30: ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮನ.
- ಬೆಳಗ್ಗೆ 11:10: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮನ.
- ಬೆಳಗ್ಗೆ 11:15: ವಂದೇ ಭಾರತ್ ರೈಲುಗಳಿಗೆ ಚಾಲನೆ.
- ಬೆಳಗ್ಗೆ 11:45 – 12:50: ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಯಾಣ.
- ಮಧ್ಯಾಹ್ನ 12:50: ಎಲೆಕ್ಟ್ರಾನಿಕ್ ಸಿಟಿ ಕಾರ್ಯಕ್ರಮದಲ್ಲಿ ಭಾಗವಹಿಸುವಿಕೆ.
- ಮಧ್ಯಾಹ್ನ 2:40: ಎಚ್‌ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸಾತಿ.