
ದೆಹಲಿ: ಕತಾರ್ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಸೋಮವಾರ ರಾತ್ರಿ ದೆಹಲಿಗೆ ಆಗಮಿಸಿದರು. ಇವರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಭಾರತಕ್ಕೆ ಭೇಟಿ ನೀಡಿದ ಕತಾರ್ ರಾಜ, ಇಂದು ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಕ್ಷೇತ್ರದ ಸಹಕಾರದ ಬಗ್ಗೆ ಮಹತ್ವದ ಚರ್ಚೆಗಳು ನಡೆಯಲಿವೆ. ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಒಪ್ಪಂದಗಳ ಕುರಿತು ಉನ್ನತ ಮಟ್ಟದ ಸಭೆಗಳೂ ನಡೆಯುವ ನಿರೀಕ್ಷೆಯಿದೆ.
2015 ರ ಬಳಿಕ ಕತಾರ್ ರಾಜ ಶೇಖ್ ತಮೀಮ್ ಅವರ ಎರಡನೇ ಅಧಿಕೃತ ಭಾರತ ಭೇಟಿ ಇದಾಗಿದೆ.