
ಸಾರ್ವಜನಿಕ ಸಮಾರಂಭವೊಂದರಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹಿರಿಯ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಗೆ ಅಕ್ಟೋಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಅಕ್ಟೋಬರ್ 20ರಂದು ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ನಡೆದಿದ್ದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಧಾರ್ಮಿಕ ಪ್ರವಚನ ನೀಡಿದ್ದರು. ಈ ಭಾಷಣದಲ್ಲಿ ಅವರು ದ್ವೇಷದ ಭಾವನೆಗಳನ್ನು ಪ್ರಚೋದಿಸುವ, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರ ದೂರಿನನ್ವಯ, ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಸಂಘಟಕರು ಸೇರಿದಂತೆ ಕೆಲವರ ವಿರುದ್ಧ ಅಕ್ಟೋಬರ್ 25ರಂದು ಎಫ್‌ಐಆರ್ ದಾಖಲಿಸಲಾಗಿದೆ.
ಈ ಪ್ರಕರಣವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 35(3) ಅಡಿಯಲ್ಲಿ ದಾಖಲಾಗಿದ್ದು, ಈ ಸಂಬಂಧ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ಇಲಾಖೆಯು ಅಧಿಕೃತವಾಗಿ ನೋಟಿಸ್ ನೀಡಿದೆ. ಈ ನೋಟಿಸ್‌ನಲ್ಲಿ ಅವರನ್ನು ಅಕ್ಟೋಬರ್ 30ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆಯುವ ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಪ್ರಕರಣವು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.



































