
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಬಸ್ ಕಂಡಕ್ಟರ್ ಅಣ್ಣಪ್ಪ (40) ಮತ್ತು ಚಳ್ಳಕೆರೆಯ ನಿವಾಸಿ ಹರ್ಷಿತ (35) ಎಂದು ಗುರುತಿಸಲಾಗಿದೆ.
ಅಪಘಾತದ ವಿವರಗಳು
ಮಂಗಳೂರಿನಿಂದ ಚಳ್ಳಕೆರೆಗೆ ಹೊರಟಿದ್ದ ಖಾಸಗಿ ಬಸ್, ಗಾಜನೂರು ಸಮೀಪದ ಅಗ್ರಹಾರ ಬಳಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.